Sri Ram Mandir : ಅಯೋಧ್ಯೆಯಲ್ಲಿ ಮದ್ಯ ಮಾರಾಟ ನಿಷೇಧಿಸಿದ ಯೋಗಿ ಸರ್ಕಾರ

ಶ್ರೀರಾಮನ ಜನ್ಮ ಭೂಮಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಮಾಡಲು ಸಿದ್ಧತೆ ನಡೆಸಲಾಗುತ್ತಿದ್ದು, ಈ ಬಗ್ಗೆ ಅಬಕಾರಿ ಸಚಿವ ಅಧಿಕೃತ ಮಾಹಿತಿ ನೀಡಿದ್ದಾರೆ.

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ʼನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಅವರು, ಅಯೋಧ್ಯೆಯಿಂದ 84 ಕಿಲೋ ಮೀಟರ್ ವ್ಯಾಪ್ತಿಯವರೆಗೆ ಮದ್ಯ ಮಾರಾಟವನ್ನು ಬಂದ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ 84 ಕಿ.ಮೀ ವ್ಯಾಪ್ತಿಯ ಒಳಗಡೆ ಇರುವ ಮದ್ಯದ ಅಂಗಡಿಗಳನ್ನು ಸ್ಥಳಾಂತರಿಸಲು ಅವಕಾಶ ನೀಡಲಾಗುತ್ತದೆ. ಸ್ಥಳಾಂತರಿಸಲು ಸಾಧ್ಯವಾಗದಿರುವ ಮದ್ಯದ ಅಂಗಡಿಗಳ ಬಾಗಿಲನ್ನು ಶಾಶ್ವತವಾಗಿ ಮುಚ್ಚಲಾಗುತ್ತದೆ ಎಂದು ನಿತಿನ್‌ ಅಗರ್ವಾಲ್‌ ತಿಳಿಸಿದ್ದಾರೆ.

ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ಶ್ರೀರಾಮ ವಿಮಾನ ನಿಲ್ದಾಣ ಮತ್ತು ಅಯೋಧ್ಯಾ ಧಾಮ್ ರೈಲು ನಿಲ್ದಾಣದ ಉದ್ಘಾಟನೆಗೆ ಈಗಾಗಲೇ ಸಿದ್ಧತೆಗಳು ನಡೆದಿದ್ದು, ಈ ಕಾರ್ಯಕ್ರಮಗಳಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿರಲಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗಿದ್ದು, ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ.

You might also like
Leave A Reply

Your email address will not be published.